ಜಾರ್ಖಂಡ್; ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 271 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ರಾಂಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಜರಂಗದಳದ ಕಾರ್ಯಕರ್ತರು ಬಸ್‌ನಲ್ಲಿ ಹಿಂತಿರುಗುತ್ತಿದ್ದಾಗ ಪೆಲಾವಲ್ ಪ್ರದೇಶದಲ್ಲಿ ಹಿಂಸಾಚಾರ ನಡೆದಿದೆ.
ರಾಂಚಿಯಲ್ಲಿ ನಡೆದ ‘ಶೌರ್ಯ ಜಾಗರಣ ಯಾತ್ರೆ’ ಮುಗಿಸಿ ವಾಪಾಸ್ಸಾಗುತ್ತಿದ್ದ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಿದ್ದರು ಮತ್ತು ಮಸೀದಿಯ ಬಳಿ ಬಸ್ ನಿಂತಾಗ ಕೆಲವು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹಜಾರಿಬಾಗ್‌ನ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ಹೇಳಿದ್ದಾರೆ.
ಇದರ ಬೆನ್ನಲ್ಲೇ ಗುಂಪೊಂದು ಬಸ್ ಮೇಲೆ ಕಲ್ಲು ತೂರಾಟ ನಡೆಸಿದೆ. ಹಿಂಸಾಚಾರದಲ್ಲಿ ಕನಿಷ್ಠ 10 ಬಜರಂಗದಳ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ 271 ಜನರ ವಿರುದ್ಧ ಪೆಲಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ 71 ಜನರನ್ನು ಹೆಸರಿಸಲಾಗಿದ್ದು, ಉಳಿದ ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. ಸ್ಥಳದಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದ್ದು, ಅಶಾಂತಿ ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.