ಬೆಂಗಳೂರು:ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ರಾತ್ರಿ 10 ಗಂಟೆಗೆ ನ್ಯಾ.ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ನಡೆದ ವಿಚಾರಣೆಯಲ್ಲಿ, ವಾದ ವಿವಾದ ಆಲಿಸಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ.
ಅಂಜುಮಾನ್ ಇಸ್ಲಾಂ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ ಹುಬ್ಬಳ್ಳಿ ಈದ್ಗಾ ವಿಚಾರದಲ್ಲಿ ಈ ಬೆಳವಣಿಗೆ ನಡೆದಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಹಿಂದೂ ಪರ ಸಂಘಟನೆಗಳಿಂದ ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲು ಸಿದ್ಧತೆಗಳನ್ನು ನಡೆಸಿದ್ದು, ಈಗಾಗಲೇ ಪೆಂಡಾಲ್ ಹಾಕಿ ಗಣೇಶನನ್ನು ಕೂರಿಸಲು ತಯಾರಿ ನಡೆಸಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ಮೆರವಣಿಗೆ ಮೂಲಕ ಗಣೇಶನ ಮೂರ್ತಿಯನ್ನು ತಂದು ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಈ ಮೆರವಣಿಗೆ ಆರಂಭಗೊಳ್ಳಲಿದೆ.