ಬೆಂಗಳೂರು;ಕಾಂಗ್ರೆಸ್‌ನಿಂದ ಆಯ್ಕೆಯಾದ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ವಕ್ಪ್ ಬೋರ್ಡ್ ಅಧ್ಯಕ್ಷ ಶಾಫೀ ಸಅದಿ ಆಗ್ರಹಿಸಿದ್ದಾರೆ.
ಈ ಕುರಿತು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಶಾಅದಿ ಮಾತನಾಡಿ,ಶೇ.88ರಷ್ಟು ಮುಸ್ಲಿಂ ಸಮುದಾಯ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ.224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅದರಲ್ಲಿ 9 ಜನರು ಗೆದ್ದಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್‌ನ 73 ಶಾಸಕರು ಗೆಲ್ಲಲು ಮುಸ್ಲಿಮರ ಪಾತ್ರ ಪ್ರಮುಖವಾಗಿದೆ.ನಾವು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಲು ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು ಎಂದು ಶಾಫಿ ಸಅದಿ ತಿಳಿಸಿದ್ದಾರೆ.
1999ರಲ್ಲಿ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆಗಿದ್ದಾಗ, ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಿದ್ದರು. ಹಾಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಇತಿಹಾಸದಲ್ಲಿ ಮುಸ್ಲಿಂ ಮುಖ್ಯಮಂತ್ರಿ ಆಗಿಲ್ಲ, ಆದರೂ ನಾವು ಮುಖ್ಯಮಂತ್ರಿ ಸ್ಥಾನ ಕೇಳುತ್ತಿಲ್ಲ.ಈ ಬಾರಿ
ಒಂಬತ್ತು ಜನ ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದಾರೆ. ಯಾರು ಸೂಕ್ತ ಎಂದು ನೋಡಿಕೊಂಡು ಕಾಂಗ್ರೆಸ್ ಪಕ್ಷ ಡಿಸಿಎಂ ಹುದ್ದೆ ನೀಡಲಿ ಎಂದು ಹೇಳಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಮುಸ್ಲಿಂ ಮುಖಂಡರು ಜೆಡಿಎಸ್ ಪಕ್ಷಕ್ಕೆ ಹೋಗಿದ್ದರು.ಆದರೂ ಶೇ.88ರಷ್ಟು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ. ಹಿಜಾಬ್ ಸೇರಿದಂತೆ ಇತರೆ ವಿಚಾರದಲ್ಲಿ ಮುಸ್ಲಿಮರು ಭಯಬೀತರಾಗಿದ್ದರು.ಆ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಹೇಳಿದ್ದಾರೆ.