ಮೈಸೂರು; ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 1.5 ಲಕ್ಷ ಕೋಟಿ ರೂ.ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.
ಮೈಸೂರಿನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಹೆಳವರಹುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದೆ ಎಂದು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಇದ್ದ ಶೇ.40 ಕಮಿಷನ್ ಸರ್ಕಾರ ನಿಮ್ಮನ್ನು ಲೂಟಿ ಮಾಡಿರುವುದು ಅತ್ಯಂತ ದುಃಖಕರ ಸಂಗತಿ. ಬಿಜೆಪಿಯವರು ಯಾವುದೇ ನಾಚಿಕೆ ಇಲ್ಲದೆ ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಿವಿಧ ಹಗರಣಗಳ ಆರೋಪಗಳು, ಗುತ್ತಿಗೆದಾರರ ಆತ್ಮಹತ್ಯೆ ಮತ್ತು ಗುತ್ತಿಗೆದಾರರಿಂದ ಪ್ರಧಾನಿಗೆ ಪತ್ರ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಿಯಾಂಕಾ ಗಾಂಧಿ, ಬಿಜೆಪಿಯಲ್ಲಿ ಅನೇಕ ಮಂದಿ ಶಾಮೀಲಾಗಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಶಾಸಕರೊಬ್ಬರ ಪುತ್ರನಿಂದ 8 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದರ ತನಿಖೆಗೆ ಸಹಕರಿಸದ ಶಾಸಕರು ಪರೇಡ್ ನಡೆಸಿದರು. ರಾಜ್ಯದಲ್ಲಿ ಒಂದೂವರೆ ಲಕ್ಷ ಕೋಟಿ ರೂ.ಲೂಟಿ ಮಾಡಲಾಗಿದೆ.ಈ ಹಣವನ್ನು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಿತ್ತು, ಅದರಿಂದ ಜನರಿಗೆ ಅನುಕೂಲವಾಗುತ್ತಿತ್ತು ಎಂದು ಪ್ರಿಯಾಂಕ ಹೇಳಿದ್ದಾರೆ.