ಬೆಂಗಳೂರು:ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಸದಸ್ಯರು ಹಾಗೂ ಅವರ ನೇತೃತ್ವದ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಹಾಗೂ ಅದನ್ನು ಪ್ರಕಟಿಸದಂತೆ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಧರ್ಮಸ್ಥಳ ದೇವಾಲಯ, ದೇವಾಲಯದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಶೀನಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನಗರದ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.
ಈ ಸಂಬಂಧ ಫೇಸ್‌ಬುಕ್, ವಾಟ್ಸಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ನೀಡಿದೆ.
ಒಂದು ವೇಳೆ ಈಗಾಗಲೇ ಟಿವಿ ಚಾನಲ್‌ಗಳು, ಫೇಸ್‌ಬುಕ್, ವಾಟ್ಸಾಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್‌ಗಳಲ್ಲಿ ಅವಹೇಳನಕಾರಿಯಾಗಿ ಪ್ರಸಾರವಾಗಿರುವ ಅಥವಾ ಹಂಚಿಕೊಂಡಿದ್ದಲ್ಲಿ ತಕ್ಷಣ ಅವುಗಳನ್ನು ತೆಗೆದು ಹಾಕುವಂತೆ ಆದೇಶ ಮಾಡಲಾಗಿರುತ್ತದೆ ಎಂದು ಶ್ರೀ ಕ್ಷೇತ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ 2012ರಲ್ಲಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಆರೋಪಗಳನ್ನು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳಹೊಂಗಳ, ಸೋಮನಾಥ್ ನಾಯಕ್, ಬಿ ಎಂ ಭಟ್, ವಿಠಲ್ ಗೌಡ ಮತ್ತು ಮಾಧ್ಯಮ ಸಂಸ್ಥೆಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ವರದಿಯಾಗಿದೆ.