ಶಿವಮೊಗ್ಗ;ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಟ ಐವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ ಬಳಿ ಸಂಜೆ ನಡೆದಿದೆ.
ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ನಜ್ಜು ಗುಜ್ಜಾಗಿರುವ ಬಸ್ಸುಗಳಿಂದ ಮೂರು ಮೃತದೇಹ ಹೊರ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಇನ್ನುಳಿದ ಮೃತದೇಹ ತೆಗೆಯಲು ಹರಸಾಹಸ ಪಡುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.