ಬೆಂಗಳೂರು;ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ.
ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುಮಾರು ಚರ್ಚೆ ನಡೆಸಿ ಸಿಎಂ, ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಕೇವಲ 8 ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾಗಿ ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಹಾಗೂ ರಾಮಲಿಂಗ ರೆಡ್ಡಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರೀಡಾಂಗಣದಲ್ಲಿ ಸುಮಾರು 35 ಸಾವಿರ ಸೀಟುಗಳ ವ್ಯವಸ್ಥೆ ಇದ್ದು, ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವನಿತರಿಗೆ ಅವಕಾಶ ನೀಡಿ,ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಕಾರ್ಯಕ್ರಮಕ್ಕೆ 1 ಲಕ್ಷ ಮಂದಿ ಆಗಮಿಸುವ ಸಾಧ್ಯತೆ ಇದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.