ಶಿವಮೊಗ್ಗ:ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.
ಇನ್ನೂ ಹಲವರ ಬಂಧನಕ್ಕೆ ಪೊಲೀಸರು ಹಳ್ಳಿಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ.ಇನ್ನು ಧರಣಿ ವೇಳೆ ಗಲಾಟೆ ಆಗುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು ಎನ್ನಲಾಗಿದೆ.ಈ ವಿಷಯ ಶಿಕಾರಿಪುರ ಪೊಲೀಸರಿಗೆ ತಿಳಿದಿದ್ದರೂ ಪ್ರತಿಭಟನೆಯನ್ನು ಹಗುರವಾಗಿ ಪರಿಗಣಿಸಿದ್ದು, ಮತ್ತು ನಿರ್ಲಕ್ಷ್ಯದಿಂದ ಕಲ್ಲುತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.
ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.ಇದರ ಬೆನ್ನಲ್ಲೇ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ,ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ.
ಘಟನೆಯಲ್ಲಿ ಕೆಲವು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ.ಶಿಕಾರಿಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರೆದಿದೆ.ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ರವಾನೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕಾರಿಪುರ ತಹಶೀಲ್ದಾರ್ ವಿಶ್ವನಾಥ್ರಿಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.